November 11, 2024

Hampi times

Kannada News Portal from Vijayanagara

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ನಿಮಿತ್ತ ಸಕ್ರಿಹಳ್ಳಿಯಲ್ಲಿ ಎಸಿ ವಾಸ್ತವ್ಯ: ಗ್ರಾಮಸ್ಥರ ಸಮಸ್ಯೆ ಆಲಿಸಿದ ಸಹಾಯಕ ಆಯುಕ್ತ ಸಿದ್ದಾರಾಮೇಶ್ವರ

 

https://youtu.be/NHc6OMSu0K4?si=SI_K4goOPEgwo6h2

 

ಹೊಸಪೇಟೆ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ನಿಮಿತ್ತ ವಿಜಯನಗರ ಸಹಾಯಕ ಆಯುಕ್ತ ಸಿದ್ದರಾಮೇಶ್ವರ ಅವರು ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಸಾಗರ ಹೋಬಳಿಯ ಸಕ್ರಿಹಳ್ಳಿ ಗ್ರಾಮದಲ್ಲಿ ಶನಿವಾರ ಗ್ರಾಮವಾಸ್ತವ್ಯ ನಡೆಸಿದರು.
ಕಂದಾಯ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ನಡೆದ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಸಹಾಯಕ ಆಯುಕ್ತ ಸಿದ್ದರಾಮೇಶ್ವರ ಅವರು ಗ್ರಾಮದೆಲ್ಲೆಡೆ ಸಂಚರಿಸಿ ರಸ್ತೆಗಳು, ಚರಂಡಿ, ಸ್ವಚ್ಛತೆ ಹಾಗೂ ಇನ್ನಿತರ ಮೂಲಸೌಕರ್ಯ ವ್ಯವಸ್ಥೆಯನ್ನು ಖುದ್ದಾಗಿ ಪರಿಶೀಲಿಸಿದರು.
ಸಕ್ರಿಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಅಂಗನವಾಡಿ ಮಕ್ಕಳ ಜೊತೆ ಮಾತನಾಡಿ ನಂತರ ಅಡುಗೆ ಕೋಣೆ, ಶೌಚಾಲಯವನ್ನು ಪರಿಶೀಲಿಸಿದರು.
ಈ ಗ್ರಾಮವಾಸ್ತವ್ಯ ನಡೆಸುವುದಕ್ಕಿಂತ ಕೆಲವು ದಿನಗಳ ಮುಂಚೆಯೇ ಗ್ರಾಮಕ್ಕೆ ತಹಶೀಲ್ದಾರ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಪಿಂಚಣಿ, ಪಹಣಿ, ದಾಖಲೆಗಳ ತಿದ್ದುಪಡಿ, ರೇಶನ್ ಕಾರ್ಡ್ ಸಮಸ್ಯೆಗಳನ್ನು ಪಟ್ಟಿ ಮಾಡಿಕೊಂಡು ಬಗೆಹರಿಸಲಾಗಿದೆ ಎಂದು ಸಹಾಯಕ ಆಯುಕ್ತ ಸಿದ್ದರಾಮೇಶ್ವರ ಅವರು ತಿಳಿಸಿದರು.


11 ಜನ ವೃದ್ಧರನ್ನು ಗುರುತಿಸಿ ವೃದ್ಧ್ಯಾಪ ಯೋಜನೆಗೆ ಒಳಪಡಿಸಲಾಯಿತು.
ಈ ಎಲ್ಲಾ ಫಲಾನುಭವಿಗಳಿಗೆ ಸ್ಥಳದಲ್ಲಿಯೇ ಪಿಂಚಣಿ ಪ್ರಮಾಣ ಪತ್ರವನ್ನು ನೀಡಲಾಯಿತು.
ಸಕ್ರಿಹಳ್ಳಿ ಗ್ರಾಮದಲ್ಲಿನ ಕೆಲವು ಜನರಿಗೆ ನಿವೇಶನ ಇಲ್ಲದವರು ಅರ್ಜಿ ಸಲ್ಲಿಸಿದ್ದು, ಅವರಿಗೆ ಆಶ್ರಯ ಯೋಜನೆಯಡಿ ಮನೆಗಳನ್ನು ಕಟ್ಟಿಸಿ ಕೊಡಲು ಕ್ರಮವಹಿಸಲಾಗುವುದು ಎಂದು ಹೇಳಿದರು.
ಸಕ್ರಿಹಳ್ಳಿ ಗ್ರಾಮದ ಮುಖಂಡರಾದ ಮಲ್ಲಿಕಾರ್ಜುನಗೌಡ, ಹೆಚ್.ಮಂಜುನಾಥ, ಇತರರು ಸೇರಿದಂತೆ ಗ್ರಾಮದಲ್ಲಿ ಅಂಗನವಾಡಿ ಕೇಂದ್ರದ ಹೊಸ ಕಟ್ಟಡ, ಸಕ್ರಿಹಳ್ಳಿ ಗ್ರಾಮವನ್ನು ಕಂದಾಯ ಗ್ರಾಮವನ್ನಾಗಿ, ಸೊನ್ನ ಹಾಗೂ ಸಕ್ರಿಹಳ್ಳಿ ರಸ್ತೆ ಸಂಪರ್ಕ ಸಮಸ್ಯೆ, ಹೈಸ್ಕೂಲ್ ಬೇಡಿಕೆ, ಪಹಣಿ ತಿದ್ದುಪಡಿ, ನಿವೇಶನ ಮಂಜೂರಾತಿ, ನೂತನ ಮನೆ ಬೇಡಿಕೆ, ಶೌಚಾಲಯ ನಿರ್ಮಾಣ, ಇನಾಮು ರದ್ದತಿ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಸಹಾಯಕ ಆಯುಕ್ತರಿಗೆ ಮನವಿಯನ್ನು ಸಲ್ಲಿಸಿದರು.
ಎಲ್ಲರ ಅಹವಾಲುಗಳನ್ನು ಸಮಾಧಾನದಿಂದ ಆಲಿಸಿದ ಸಹಾಯಕ ಆಯುಕ್ತ ಸಿದ್ದರಾಮೇಶ್ವರ ಅವರು ತಮ್ಮ ಸಮಸ್ಯೆಗಳನ್ನು ಶೀಘ್ರ ಪರಿಹರಿಸಲಾಗುವುದು ಎಂದು ಜನರಿಗೆ ಅಶ್ವಾಸನೆ ನೀಡಿದರು.
ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಹಾಯಕ ಆಯುಕ್ತ ಸಿದ್ದರಾಮೇಶ್ವರ ಅವರು ಸಕ್ರಿಹಳ್ಳಿ ಗ್ರಾಮವನ್ನು ಕಂದಾಯ ಗ್ರಾಮವನ್ನಾಗಿ ಮಾಡಲು ಹಾಗೂ ಅಂಗನವಾಡಿ ಕೇಂದ್ರವನ್ನು ಹೊಸದಾಗಿ ನಿರ್ಮಾಣ ಮಾಡುವಂತೆ ಕ್ರಮವಹಿಸಲಾಗುವುದು ಮತ್ತು ಸೊನ್ನ ಗ್ರಾಮ ಪಂಚಾಯಿತಿ ಹಾಗೂ ಸಕ್ರಿಹಳ್ಳಿ ನಡುವಿನ ಬಂಡಿ ದಾರಿಯ ಸಮಸ್ಯೆಯನ್ನು ಶೀಘ್ರದಲ್ಲಿ ಬಗೆಹರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಇನ್ನೂ 5-6 ತಿಂಗಳಲ್ಲಿ ಊರಿನ ಸ್ವಚ್ಛತೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಒಳಗೊಂಡಂತೆ ಇತರೆ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪಿಡಿಒ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಕ್ರಮ ವಹಿಸುವಂತೆ ಈ ಸಂದರ್ಭದಲ್ಲಿ ಸೂಚಿಸಿದರು.
ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಅಭಿಯಾನದ ನಿಮಿತ್ತ ವೇದಿಕೆ ಆವರಣದಲ್ಲಿ ಹಾಕಲಾಗಿದ್ದ ಆಯುಷ್ ಆರೋಗ್ಯ ಮೇಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಅಭಿಯಾನ, ಕೋವಿಡ್ ಲಸಿಕಾಕರಣ ಅಮೃತ ಮಹೋತ್ಸವ, ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಕ್ಷಯರೋಗದ ಕುರಿತು ಜಾಗೃತಿ ಅಭಿಯಾನ, ಕೃಷಿ-ತೋಟಗಾರಿಕೆ ಇಲಾಖೆಗಳ ವತಿಯಿಂದ ವಸ್ತು ಪ್ರದರ್ಶನದ ಸ್ಟಾಲ್‍ಗಳನ್ನು ಹಾಕಲಾಗಿತ್ತು.
ಈ ಸಂದರ್ಭದಲ್ಲಿ ಹಗರಿಬೊಮ್ಮನಹಳ್ಳಿ ತಹಶೀಲ್ದಾರ್ ವಿ.ಕಾರ್ತಿಕ್, ಕಾರ್ಯನಿರ್ವಾಹಕ ಅಧಿಕಾರಿ ಪರಮೇಶ್ವರಪ್ಪ, ಗ್ರೇಟ್-2 ತಹಶೀಲ್ದಾರ್ ವಿಶ್ವೇಶ್ವರಯ್ಯ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಕೋಟ್ರೇಶ್, ಸೊನ್ನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೊನ್ನ ಬಿ.ಎಂ. ಲಲೀತಾ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೀರನಗೌಡ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಶಂಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಸಿ.ಆನಂದ, ಸೊನ್ನ ಗ್ರಾಮ ಪಂಚಾಯಿತಿ ಪಿಡಿಒ ಬೊಗೇಶ್, ಕಂದಾಯ ನಿರೀಕ್ಷಕರು ಹಾಗೂ ಗ್ರಾಮಲೆಕ್ಕಾಧಿಕಾರಿ ಗಂಗಾಧರ ಹಾಗೂ ಯಂಕಾರೆಡ್ಡಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳು ಇದ್ದರು.

 

 

ಜಾಹೀರಾತು
error: Content is protected !!