https://youtu.be/NHc6OMSu0K4?si=SI_K4goOPEgwo6h2
ವಿದ್ಯಾರ್ಥಿಗಳಿಗೆ ಅನಾನುಕೂಲವಾಗದಂತೆ ಕಾರ್ಯನಿರ್ವಹಿಸಿ: ಡಿಸಿ ವೆಂಕಟೇಶ್
ಹಂಪಿಟೈಮ್ಸ್ ಹೊಸಪೇಟೆ :
ಮಾ.31ರಿಂದ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಪ್ರವೇಶ ಪತ್ರ ಪಡೆಯದ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ಒದಗಿಸುವ ಜೊತೆಗೆ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗದ ರೀತಿಯಲ್ಲಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ತಿಳಿಸಿದರು.
ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆಯ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಂಜೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯದಲ್ಲಿ ಯಾವುದೇ ಲೋಪ ಉಂಟಾಗದಂತೆ ಎಚ್ಚರವಹಿಸಿ ಸೂಕ್ತ ಮಾರ್ಗಸೂಚಿಯನ್ವಯ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಬೇಕು.
ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಮೂಲಸೌಕರ್ಯ ವ್ಯವಸ್ಥೆ, ಕೊಠಡಿ ನಿರ್ವಹಣೆ, ಕುಡಿಯುವ ನೀರು, ಸೂಕ್ತ ಆಸನ ವ್ಯವಸ್ಥೆ ಹಾಗೂ ಸಿಸಿ ಕ್ಯಾಮರಾ ವ್ಯವಸ್ಥೆ, ಸೇರಿದಂತೆ ಪ್ರಶ್ನೆ ಪತ್ರಿಕೆಗಳ ಸರಬರಾಜು ಹಾಗೂ ಸೂಕ್ತ ಸಾರಿಗೆ ವ್ಯವಸ್ಥೆ ಕುರಿತು ಕ್ರಮ ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಪರೀಕ್ಷಾ ಪತ್ರಿಕೆಗಳನ್ನು ಶಾಲೆಗೆ ಸಾಗಿಸುವ ವೇಳೆ ಹಾಗೂ ಪರೀಕ್ಷಾ ಸಮಯದಲ್ಲಿ ಸೂಕ್ತ ಪೊಲೀಸ್ ಭದ್ರತೆ ಹಾಗೂ ನಿಷೇಧಾಜ್ಞೆ ಕುರಿತು ಆದೇಶ ನೀಡಲಾಗುವುದು ಎಂದು ತಿಳಿಸಿದರು.
ಸಭೆಯ ಆರಂಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ(ಆಡಳಿತ) ಉಪನಿರ್ದೇಶಕ ಜಿ. ಕೊಟ್ರೇಶ್ ಅವರು ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಕೈಗೊಳ್ಳಲಾದ ಸಿದ್ದತೆ ಹಾಗೂ ಅಂಕಿಆಂಶಗಳ ಮಾಹಿತಿಯನ್ನು ನೀಡಿದರು.
ಪರೀಕ್ಷೆ ಬರೆಯಲಿರುವ 21,934 ವಿದ್ಯಾರ್ಥಿಗಳು:
ಮಾ.31ರಿಂದ ಏ.15ರ ವರೆಗೆ ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆಗಳು ನಡೆಯಲಿವೆ. ಜಿಲ್ಲೆಯ ಎಲ್ಲಾ ತಾಲ್ಲೂಕಿನ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಾಗೂ ಇತರೆ ಒಟ್ಟು 327 ಶಾಲೆಗಳ 21,934 ಜನ ಮಕ್ಕಳು ಪರೀಕ್ಷೆಗೆ ನೋಂದಾಯಿಸಿದ್ದಾರೆ.
ಜಿಲ್ಲೆಯಲ್ಲಿ 40 ಸರ್ಕಾರಿ, 20 ಅನುದಾನಿತ ಹಾಗೂ 13 ಅನುದಾನ ರಹಿತ ಒಟ್ಟು 73 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಅದರಲ್ಲಿ 34 ನಗರ ಹಾಗೂ 39 ಗ್ರಾಮೀಣ ಭಾಗದ ಪರೀಕ್ಷಾ ಕೇಂದ್ರಗಳಾಗಿವೆ. ಪರೀಕ್ಷಾ ಕೇಂದ್ರಕ್ಕೆ ಒಬ್ಬ ಮುಖ್ಯ ಅಧೀಕ್ಷಕರು ಸೇರಿದಂತೆ 18 ಉಪ ಮುಖ್ಯ ಅಧೀಕ್ಷಕರು ಕಾರ್ಯನಿರ್ವಹಿಸುವರು ಎಂದು ಮಾಹಿತಿ ನೀಡಿದರು.
ಈ ಬಾರಿ 4 ಹೊಸ ಪರೀಕ್ಷಾ ಕೇಂದ್ರ ಆರಂಭ:
ಪ್ರಸಕ್ತ ಸಾಲಿನಲ್ಲಿ ನಾಲ್ಕು ಹೊಸ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಹೊಸಪೇಟೆಯ ರೋಟರಿ ಆಂಗ್ಲ ಮಾದ್ಯಮ ಶಾಲೆ, ಡಣಾಪುರ ಸರ್ಕಾರಿ ಪ್ರೌಢಶಾಲೆ, ಕೂಡ್ಲಿಗಿ ತಾಲ್ಲೂಕಿನ ಕೋಗಳಿಯ ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ ತಾಯಕನಹಳ್ಳಿಯ ಸರ್ಕಾರಿ ಪ್ರೌಢಶಾಲೆಗಳಲ್ಲಿ ಪರೀಕ್ಷೆ ನಡೆಯಲಿವೆ.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ. ಸದಾಶಿವ ಪ್ರಭು, ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಸಾರ್ವಜನಿಕ ಶಿಕ್ಷಣ ಇಲಾಖೆ(ಅಭಿವೃದ್ಧಿ) ಉಪನಿರ್ದೇಶಕರಾದ ಹನುಮಕ್ಕ, ಉಪವಿಭಾಗಧಿಕಾರಿ ಸಿದ್ದರಾಮೇಶ್ವರ ಸೇರಿದಂತೆ ವಿವಿಧ ತಾಲ್ಲೂಕಿನ ತಹಶೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಪರೀಕ್ಷೆಗೆ ನಿಯೋಜನೆಗೊಂಡ ಅಧಿಕಾರಿಗಳು ಇದ್ದರು.
More Stories
ಕಳಚಿ ಬಿತ್ತು ರಾಷ್ಟ್ರಧ್ವಜ, ಈಬಾರಿ ಬಜೆಟ್ನಲ್ಲಿ ವಿಜಯನಗರ ಜಿಲ್ಲೆಗೆ ಮೆಡಿಕಲ್ ಕಾಲೇಜ್ : ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಭರವಸೆ
ತ್ರಿವಿಧ ದಾಸೋಹದ ದಕ್ಷಿಣ ಭಾರತದ ಕುಂಭಮೇಳ… ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ರಥೋತ್ಸವ