https://youtu.be/NHc6OMSu0K4?si=SI_K4goOPEgwo6h2
ಹಂಪಿ ಟೈಮ್ಸ್ ಹೊಸಪೇಟೆ
ಡೆಂಗ್ಯು ಜ್ವರವನ್ನು ಜನರು ನಿರ್ಲಕ್ಷಿಸದೆ ಸೂಕ್ತವಾದ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಡೆಂಗ್ಯು ಜ್ವರದ ಬಗ್ಗೆ ಎಚ್ಚರಿಕೆ ವಹಿಸದಿದ್ದರೆ ಮಾರಣಾಂತಿಕವಾಗಬಹುದು ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯ ಅವರಣದಲ್ಲಿ ರಾಷ್ಟ್ರೀಯ ಡೆಂಗ್ಯು ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಅಶ್ರಿತರೋಗಗಳ ನಿಯಂತ್ರಣಾಧಿಕಾರಿ ಕಚೇರಿ ಇವರ ವತಿಯಿಂದ ‘ಸಮುದಾಯದೊಂದಿಗೆ ಸೇರಿ ಡೆಂಗ್ಯು ನಿಯಂತ್ರಿಸೋಣ’ ಎಂಬ ಘೋಷವಾಕ್ಯದೊಂದಿಗೆ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದರು. ಮುಂಗಾರು ಪೂರ್ವ, ಮುಂಗಾರು ಮತ್ತು ಮುಂಗಾರಿನ ನಂತರದ ಸಮಯದಲ್ಲಿ ಡೆಂಗ್ಯು ಸೊಳ್ಳೆಗಳ ಸಂತತಿಯು ತೀವ್ರ ಪ್ರಮಾಣದಲ್ಲಿ ಇದ್ದು ಆದ್ದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಡೆಂಗ್ಯೂ ಸೊಳ್ಳೆ ಯಾವಾಗ ಕಚ್ಚುತ್ತದೆ, ಡೆಂಗ್ಯೂ ಕಾಯಿಲೆಯ ಲಕ್ಷಣಗಳೇನು, ಹೇಗೆ ಮುಂಜಾಗ್ರತೆ ವಹಿಸಬೇಕು ಎನ್ನುವಂತಹ ನಾನಾ ವಿಷಯಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಮಾಡಲಾಗುವುದು. ಇನ್ನೂ ಹೆಚ್ಚಿನ ಮಟ್ಟದಲ್ಲಿ ಜನರಿಗೆ ಅರಿವು ಮೂಡಿಸುವುದಕ್ಕಾಗಿ ನಗರದ ಸಂಘ ಸಂಸ್ಥೆಗಳ ಸಹಕಾರ ಪಡೆಯಲಾಗುವುದು. ಮತ್ತು ಸೋಷಿಯಲ್ ಮಿಡಿಯಾವನ್ನು ಬಳಸಿಕೊಂಡು ವ್ಯಾಪಕ ಪ್ರಮಾಣದಲ್ಲಿ ಜನರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಶಂಕರ ನಾಯ್ಕ ಮಾತನಾಡಿ, ರೋಗಗಳು ಬಂದಮೇಲೆ ಚಿಕಿತ್ಸೆ ಪಡೆಯುವ ಬದಲಿಗೆ ಬರುವ ಮುಂಚೆ ಅದರ ಮುಂಜಾಗೃತಿ ವಹಿಸುವುದು ಸೂಕ್ತ. ಜನರು ಮನೆಯಲ್ಲಿ ಶೇಖರಿಸಿದ ನೀರನ್ನು ಆಗಾಗ ಬದಲಾಯಿಸುತ್ತಿರಬೇಕು. ಈ ಬಗ್ಗೆ ಗ್ರಾಮೀಣ ಭಾಗದ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯ ಪಂಚಾಯಿತಿ ಮಟ್ಟದ ಅಧಿಕಾರಿಗಳು ಹೆಚ್ಚಿನ ಕ್ರಮ ವಹಿಸಬೇಕು ಹಾಗೂ ಡೆಂಗ್ಯು ತಡೆಯಲು ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ ದೊಡ್ಡಮನಿ, ಜಿಲ್ಲಾ ಅರೋಗ್ಯ ನಿರೀಕ್ಷಣಾಧಿಕಾರಿ ಎಂ.ಧರ್ಮನಗೌಡ, ಟಿಎಚ್‌ಒ ಡಾ.ಭಾಸ್ಕರ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕಮಲಮ್ಮ, ಬೆಳಗಾವಿಯ ಡಾ.ಸಿಧ್ದಲಿಂಗಯ್ಯ, ತಾಲೂಕು ಮಟ್ಟದ ಆರೋಗ್ಯ ಅಧಿಕಾರಿಗಳು, ವೈದ್ಯರು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಕರಪತ್ರ ವಿತರಣೆ: ಈಡೀಸ್ ಈಜಿಪ್ಟೆ ಸೊಳ್ಳೆಯ ಕಚ್ಚುವಿಕೆಯಿಂದ ಡೆಂಗ್ಯು ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಸ್ವಚ್ಚ ನೀರಿನಲ್ಲಿ ಸಂತಾನಭಿವೃದ್ಧಿ ಮಾಡುತ್ತವೆ. ಹಾಗೂ ಹಗಲು ಹೊತ್ತಿನಲ್ಲಿ ಮನುಷ್ಯರನ್ನು ಕಚ್ಚುತ್ತವೆ. ಮೂರಕ್ಕಿಂತ ಹೆಚ್ಚು ದಿನಗಳಿಂದ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗ, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಂಡಲ್ಲಿ ತಕ್ಷಣವೇ ಆಶಾ, ಆರೋಗ್ಯ ಕಾರ್ಯಕರ್ತರನ್ನು ಸಂಪರ್ಕಿಸಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಿರಿ ಎನ್ನುವ ಮಾಹಿತಿಯ ಕರಪತ್ರಗಳನ್ನು ಇದೆ ವೇಳೆ ಸಾರ್ವಜನಿಕರಿಗೆ ವಿತರಿಸಲಾಯಿತು.
More Stories
ಸಂಡೂರು ಕಾಂಗ್ರೆಸ್ ಅಭ್ಯರ್ಥಿ ಈ.ಅನ್ನಪೂರ್ಣ ಗೆಲುವು, ಯಾರಿಗೆ ಎಷ್ಟು ಮತ?
ನಾಡಿನ ಕಲೆ, ಸಂಸ್ಕೃತಿ ವಿಶ್ವಮಾನ್ಯವಾಗಿದೆ : ಕಾಂಗ್ರೆಸ್ ಯುವನಾಯಕ ಅಶೋಕ್ ಭೀಮನಾಯ್ಕ ಅಭಿಮತ
ಭಾರತೀಯ ಅಂಚೆ ಇಲಾಖೆಯಿಂದ ರಾಷ್ಟ್ರ ಮಟ್ಟದ ಪತ್ರಲೇಖನ ಸ್ಪರ್ಧೆ : ಅಂಚೆ ಅಧೀಕ್ಷಕರು ಪಿ.ಚಿದಾನಂದ ಹೇಳಿಕೆ