https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ್ ಹೊಸಪೇಟೆ
ವಿಶ್ವವಿಖ್ಯಾತ ಹಂಪಿ ಉತ್ಸವವನ್ನು ಈ ಬಾರಿ ಫೆಬ್ರವರಿ 13, 14 ಮತ್ತು 15 ರಂದು ಅತ್ಯಂತ ವೈಭವದಿಂದ ಆಚರಿಸಲು ನಿರ್ಧರಿಸಲಾಗಿದ್ದು ಮುಖ್ಯ ವೇದಿಕೆ ಸೇರಿದಂತೆ ಐದು ವೇದಿಕೆಗಳಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ವಸತಿ, ವಕ್ಫ್ ಹಾಗೂ ಅಲ್ಪಸಂಖ್ಯಾತರ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ತಿಳಿಸಿದರು.
ಅವರು ಗುರುವಾರ ಹಂಪಿಗೆ ಭೇಟಿ ನೀಡಿ ಹಂಪಿ ಉತ್ಸವ ನಡೆಯುವ ಮುಖ್ಯ ವೇದಿಕೆ ಸ್ಥಳ ಪರಿಶೀಲನೆ ನಡೆಸಿ ವಾಹನಗಳ ನಿಲುಗಡೆ ಸ್ಥಳ ಪರಿಶೀಲನೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಉತ್ಸವದ ದಿನಾಂಕಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ದಿನಾಂಕಗಳನ್ನು ಅಂತಿಮಗೊಳಿಸಲಾಗಿದೆ.
ಫೆಬ್ರವರಿ 13 ರಂದು ಮುಖ್ಯಮಂತ್ರಿಗಳು ಹಂಪಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಈ ಬಾರಿ ಕೇವಲ ಮುಖ್ಯ ವೇದಿಕೆಗೆ ಸೀಮಿತವಾಗದೆ, ಒಟ್ಟು ಐದು ವಿವಿಧ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮಾಹಿತಿ ನೀಡಲು ವ್ಯಾಪಕ ಪ್ರಚಾರ ಕೈಗೊಳ್ಳಲು ಸೂಚಿಸಲಾಗಿದೆ.


ಕಲಾವಿದರ ಆಯ್ಕೆ: ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕಲಾವಿದರನ್ನು ಆಹ್ವಾನಿಸುವ ಕುರಿತು ಪ್ರಸ್ತಾವನೆಗಳನ್ನು ಸಲ್ಲಿಲಾಗಿದ್ದು, ಶೀಘ್ರದಲ್ಲೇ ಅಂತಿಮ ಪಟ್ಟಿ ಬಿಡುಗಡೆಯಾಗಲಿದೆ. ಅಶ್ವಿನಿ ಪುನೀತ್ ರಾಜ್‌ಕುಮಾರ್, ಧ್ರುವಸರ್ಜು ಸೇರಿದಂತೆ ಹಲವು ಗಣ್ಯರನ್ನು ಆಹ್ವಾನಿಸುವ ಕುರಿತು ಚರ್ಚಿಸಲಾಗಿದೆ.
ಸ್ಥಳೀಯ ಕಲಾವಿದರಿಗೆ ಆದ್ಯತೆ: ಕಳೆದ ಬಾರಿಯಂತೆ ಈ ಬಾರಿಯೂ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುವುದು.
ಹೊಸ ವಿನ್ಯಾಸ: ಕಳೆದ ಎರಡು ವರ್ಷಗಳಿಗಿಂತ ಈ ಬಾರಿ ವೇದಿಕೆಯ ವಿನ್ಯಾಸ ಮತ್ತು ಸ್ಮಾರಕಗಳ ಮಾದರಿಗಳು ವಿಭಿನ್ನವಾಗಿ ಮತ್ತು ಆಕರ್ಷಕವಾಗಿರಲಿವೆ.
ಸೌಕರ್ಯ ಮತ್ತು ಸುಧಾರಣೆಗಳು: ಪಾರ್ಕಿಂಗ್ ವ್ಯವಸ್ಥೆ: ಕಳೆದ ವರ್ಷದಂತೆ ಈ ಬಾರಿ ರೈತರೊಂದಿಗೆ ಚರ್ಚಿಸಿ ಹೆಚ್ಚಿನ ಪಾರ್ಕಿಂಗ್ ಸ್ಥಳಾವಕಾಶಕ್ಕೆ ಒಪ್ಪಿಗೆ ಪಡೆಯಲಾಗುತ್ತದೆ. ರೈತರ ಬೆಳೆ ನಷ್ಟವಾದಲ್ಲಿ ಅದಕ್ಕೆ ಪರಿಹಾರವನ್ನು ನೀಡಿ ಉತ್ಸವಕ್ಕೆ ಪಾರ್ಕಿಂಗ್ ಗೆ ಬಳಕೆ ಮಾಡಿಕೊಂಡು ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದರು.
ರಸ್ತೆ ದುರಸ್ತಿ: ಹಗರಿಬೊಮ್ಮನಹಳ್ಳಿಯಿಂದ ಶಿವಮೊಗ್ಗ ರಸ್ತೆ ಸೇರಿದಂತೆ ಉತ್ಸವಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಹದಗೆಟ್ಟಿರುವ ಬಗ್ಗೆ ದೂರುಗಳು ಬಂದಿದ್ದು, ಅವುಗಳನ್ನು ಕೂಡಲೇ ದುರಸ್ತಿ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ನಾಡಹಬ್ಬವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡುತ್ತೇನೆ ಎಂದರು.
ಈ ವೇಳೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿ.ಪಂ.ಸಿಇಓ ನೊಂಗ್ಜಾಯ್ ಮಹ್ಮದ್ ಅಕ್ರಂ ಅಲಿ ಷಾ, ಪೊಲೀಸ್ ಅಧೀಕ್ಷಕಿ ಎಸ್.ಜಹ್ನಾವಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.



More Stories
ಅಕ್ರಮ ಮದ್ಯ ಮಾರಾಟಕ್ಕೆ ಬ್ರೇಕ್, ಕೋಟ್ಯಂತರ ರೂಪಾಯಿ ರಾಜಸ್ವ ಸಂಗ್ರಹ : ಅಬಕಾರಿ ನಿರೀಕ್ಷಕಿ ಎಸ್.ಬಿ.ಮಮತಾ
ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ನಿಲ್ಲಿಸಿ: ಕೇಂದ್ರ ಸರ್ಕಾರದ ವಿರುದ್ಧ ಅಶೋಕ್ ಭೀಮನಾಯ್ಕ ಆಕ್ರೋಶ
ನಿಯಮ ಉಲ್ಲಂಘಿಸಿದರೆ ಕಠಿಣ ದಂಡ