September 23, 2026

Hampi times

Kannada News Portal from Vijayanagara

ಸಮಾಜದಲ್ಲಿ ಮಕ್ಕಳನ್ನು ಸುರಕ್ಷಿತವಾಗಿಡುವುದು ಶಿಕ್ಷಕರ ಮೂಲಭೂತ ಕರ್ತವ್ಯ

https://youtu.be/NHc6OMSu0K4?si=SI_K4goOPEgwo6h2

ಹಂಪಿ ಟೈಮ್ಸ್‌  ಕೊಪ್ಪಳ

ಮಕ್ಕಳ ಹಕ್ಕುಗಳ ರಕ್ಷಣೆ, ಬಾಲ್ಯವಿವಾಹ ತಡೆ ಹಾಗೂ ಪೋಕ್ಸೋ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನವು ಇಂದಿನ ಸಮಾಜಕ್ಕೆ ಅತ್ಯಂತ ತುರ್ತಾಗಿ ಆಗಬೇಕಿರುವ ಕಾರ್ಯವಾಗಿದ್ದು, ಮಕ್ಕಳನ್ನು ಸುರಕ್ಷಿತವಾಗಿಡುವುದು ಪ್ರತಿಯೊಬ್ಬ ನಾಗರಿಕನ ಮತ್ತು ಶಿಕ್ಷಕರ ಪ್ರಮುಖ ಜವಾಬ್ದಾರಿಯಾಗಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತ ಆಶ್ರಯದಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ “ಮಕ್ಕಳ ಹಕ್ಕುಗಳು ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ” ಕುರಿತ ತರಬೇತುದಾರರ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

 

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು, ಸಮಾಜದಲ್ಲಿ ಮಕ್ಕಳನ್ನು ಸುರಕ್ಷಿತವಾಗಿಡುವುದು ಮತ್ತು ರಕ್ಷಿಸುವುದು ಶಿಕ್ಷಕರ ಮೂಲಭೂತ ಕರ್ತವ್ಯ. ಭಾರತೀಯ ನಾಗರಿಕ ಸಂಹಿತೆ ಹಾಗೂ ಪೋಕ್ಸೋ ಕಾಯ್ದೆಯಡಿ ಅಪರಾಧವನ್ನು ನೋಡಿಯೂ ಸುಮ್ಮನಿರುವುದು ಶಿಕ್ಷಾರ್ಹ ಅಪರಾಧ. ಯಾವುದೇ ಸಣ್ಣ ಘಟನೆಯನ್ನೂ ನಿರ್ಲಕ್ಷಿಸದೆ, ಶಾಲೆಗಳಲ್ಲಿ ಮಕ್ಕಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಮತ್ತು ತರಬೇತಿಯ ಅಂಶಗಳು ತಕ್ಷಣವೇ ಅನುಷ್ಠಾನಗೊಳ್ಳಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ದರಗದ ಮಾತನಾಡಿ, ಪೋಕ್ಸೋ ಪ್ರಕರಣಗಳಲ್ಲಿ ಹೆಚ್ಚಿನ ಅಪರಾಧಿಗಳು ಹತ್ತಿರದವರು ಮತ್ತು ಪರಿಚಯಸ್ಥರೇ ಆಗಿರುತ್ತಾರೆ. ಬಾಲ್ಯವಿವಾಹ ಕಾಯ್ದೆ ಉಲ್ಲಂಘಿಸಿದರೆ 2 ವರ್ಷಗಳವರೆಗೆ ಕಠಿಣ ಜೈಲು ಶಿಕ್ಷೆ ಹಾಗೂ ₹2 ಲಕ್ಷ ದಂಡ ವಿಧಿಸಲಾಗುತ್ತದೆ. ಪೋಕ್ಸೋ ಕಾಯ್ದೆಯಡಿ ಕಠಿಣ ಜೀವಾವಧಿ ಶಿಕ್ಷೆಗೂ ಅವಕಾಶವಿದೆ. ವಿದ್ಯಾರ್ಥಿಗಳು 2-3 ದಿನ ಸತತವಾಗಿ ಗೈರುಹಾಜರಾದರೆ ಶಿಕ್ಷಕರು ತಕ್ಷಣ ಕಾರಣ ವಿಚಾರಿಸಿ ಬಾಲ್ಯವಿವಾಹ ಮತ್ತು ಬಾಲಕಾರ್ಮಿಕ ಪದ್ಧತಿಯನ್ನು ತಡೆಯಬೇಕು ಎಂದು ತಿಳಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್‌ಕುಮಾರ್ ಎನ್. ಮಾತನಾಡಿ, ಶಾಲಾ ಆವರಣದಲ್ಲಿ ಯಾವುದೇ ದೌರ್ಜನ್ಯ ಕಂಡುಬಂದರೆ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವುದು ಕಾನೂನು ಪ್ರಕಾರ ಕಡ್ಡಾಯ. ಅಪರಾಧಗಳನ್ನು ಮುಚ್ಚಿಡಲು ಯತ್ನಿಸುವ ಸಿಬ್ಬಂದಿ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ಯುನಿಸೆಫ್ ವಿಭಾಗೀಯ ಸಂಯೋಜಕ ಡಾ. ಕೆ. ರಾಘವೇಂದ್ರ ಭಟ್ ಮತ್ತು ವ್ಯವಸ್ಥಾಪಕ ಹರೀಶ ಜೋಗಿ ಅವರು ವಿಷಯ ಕುರಿತು ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧು ಅಂಗಡಿ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಗವಿಸಿದ್ದಪ್ಪ ಹೊಸಮನಿ, ಬೆಂಗಳೂರಿನ ಚೈಲ್ಡ್ ರೈಟ್ಸ್ ಟ್ರಸ್ಟ್‌ನ ಸತೀಶ್ ಜಿ. ಸೇರಿದಂತೆ ಶಿಕ್ಷಕರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Please follow and like us: