November 27, 2026

Hampi times

Kannada News Portal from Vijayanagara

7 ದಿನಗಳಲ್ಲಿ ಶೇ.100 ನೋಂದಣಿ ಪೂರ್ಣಗೊಳಿಸಲು ಗಡುವು; ನಿರ್ಲಕ್ಷ್ಯ ವಹಿಸಿದರೆ ಇಂಕ್ರಿಮೆಂಟ್ ತಡೆ ಎಚ್ಚರಿಕೆ

ಹೊಸಪೇಟೆ: ಜಿಲ್ಲೆಯಾದ್ಯಂತ ತಂಬಾಕು ಮುಕ್ತ ಶಿಕ್ಷಣ ಸಂಸ್ಥೆಗಳ ನಿರ್ಮಾಣಕ್ಕೆ ಒತ್ತು ನೀಡಲಾಗುತ್ತಿದ್ದರೂ, ಜಿಲ್ಲೆಯ 1,612 ಶಾಲೆಗಳ ಪೈಕಿ ಕೇವಲ 62 ಶಾಲೆಗಳು ಮಾತ್ರ ತಂಬಾಕು ಮುಕ್ತ ಶಿಕ್ಷಣ ಸಂಸ್ಥೆ (Tobacco Free Educational Institution) ಆ್ಯಪ್‌ನಲ್ಲಿ ನೋಂದಣಿಯಾಗಿವೆ. ಮುಂದಿನ 7 ದಿನಗಳಲ್ಲಿ ಶೇ. 100ರಷ್ಟು ನೋಂದಣಿ ಪೂರ್ಣಗೊಳ್ಳಬೇಕು. ತಪ್ಪಿದಲ್ಲಿ ಸಂಬಂಧಪಟ್ಟವರ ವಿರುದ್ಧ ನೋಟಿಸ್ ನೀಡುವುದರ ಜೊತೆಗೆ ಕಾನೂನಾತ್ಮಕವಾಗಿ ಇಂಕ್ರಿಮೆಂಟ್ ತಡೆಹಿಡಿಯುವ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗರಿಮಾ ಪನ್ವಾರ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕಳೆದ ಮೂರು ವರ್ಷಗಳಿಂದ ಶಾಲೆಗಳಿಗೆ ತಂಬಾಕು ಮುಕ್ತ ಶಿಕ್ಷಣ ಸಂಸ್ಥೆ ಆ್ಯಪ್‌ನಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗುತ್ತಿದ್ದರೂ, ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಸಾಧಿಸದಿರುವುದಕ್ಕೆ ಅಧಿಕಾರಿಗಳು ಹಾಗೂ ಶಾಲಾ ಮುಖ್ಯಸ್ಥರ ಕಾರ್ಯವೈಖರಿ ಕುರಿತು ಅವರು ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲೆಯ ಎಲ್ಲ 1,612 ಶಾಲೆಗಳೂ ಮುಂದಿನ ಏಳು ದಿನಗಳೊಳಗೆ ತಂಬಾಕು ಮುಕ್ತ ಶಿಕ್ಷಣ ಸಂಸ್ಥೆ ಆ್ಯಪ್‌ನಲ್ಲಿ ಶೇ. 100ರಷ್ಟು ನೋಂದಣಿ ಪೂರ್ಣಗೊಳಿಸಬೇಕು. ನಿಗದಿತ ಗಡುವಿನೊಳಗೆ ನೋಂದಣಿ ಪೂರ್ಣಗೊಳಿಸದ ಶಾಲೆ-ಕಾಲೇಜುಗಳ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು. ವಿಶೇಷವಾಗಿ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಮುಖ್ಯ ಶಿಕ್ಷಕರು ನೋಂದಣಿ ಪ್ರಕ್ರಿಯೆಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡಿ, ಯಾವುದೇ ಕಾರಣಕ್ಕೂ ವಿಳಂಬವಾಗದಂತೆ ಕ್ರಮ ವಹಿಸಬೇಕು ಎಂದು ತಿಳಿಸಿದರು. ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದರೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಮುಖ್ಯ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಜರುಗಿಸುವುದರ ಜೊತೆಗೆ ಇಂಕ್ರಿಮೆಂಟ್ ತಡೆಹಿಡಿಯುವಂತಹ ಕ್ರಮವನ್ನೂ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಮಾತನಾಡಿ, ಶಾಲಾ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ತಂಬಾಕು ಮುಕ್ತವಾಗಿಡುವುದು, ವಿದ್ಯಾರ್ಥಿಗಳಲ್ಲಿ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವುದು ಮತ್ತು ಮಕ್ಕಳನ್ನು ತಂಬಾಕು ಉತ್ಪನ್ನಗಳಿಂದ ದೂರವಿಡುವ ನಿಟ್ಟಿನಲ್ಲಿ ತಂಬಾಕು ಮುಕ್ತ ಶಿಕ್ಷಣ ಸಂಸ್ಥೆ ನೋಂದಣಿ ಅತ್ಯಂತ ಮಹತ್ವದ್ದಾಗಿದೆ. ಹೀಗಾಗಿ ನಿಗದಿತ ಗಡುವಿನೊಳಗೆ ಜಿಲ್ಲೆಯ ಎಲ್ಲ ಶಾಲೆಗಳು ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

3.95 ಲಕ್ಷ ರೂ. ದಂಡ ಸಂಗ್ರಹ: ತಹಶೀಲ್ದಾರ್ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಸಂಬಂಧಿತ ಇಲಾಖೆಗಳ ಸಹಯೋಗದೊಂದಿಗೆ ಜಂಟಿ ದಾಳಿ ನಡೆಸಿ, ಕೋಟ್ಪಾ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ದಂಡ ಹಾಗೂ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿಯೂ ಹೆಚ್ಚಿನ ನಿಗಾ ವಹಿಸಬೇಕು. ತಂಬಾಕು ಸೇವನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಕುರಿತು ಸಾರ್ವಜನಿಕರಲ್ಲಿ ನಿರಂತರ ಜಾಗೃತಿ ಮೂಡಿಸುವುದರೊಂದಿಗೆ, ಶಾಲೆಗಳು, ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕೋಟ್ಪಾ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದರು. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಪ್ರತಿಕ್ರಿಯಿಸಿ, ಕೋಟ್ಪಾ ಕಾಯ್ದೆ ಉಲ್ಲಂಘನೆಗಳ ವಿರುದ್ಧ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ದಾಳಿ ನಡೆಸಿ ಒಟ್ಟು 3.95 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ವೆಂಡರ್ ಲೈಸೆನ್ಸ್ ನೋಂದಣಿ ಪರವಾನಗಿ ಕಡ್ಡಾಯ: ತಂಬಾಕು ಉತ್ಪನ್ನಗಳ ಮಾರಾಟಗಾರರು ನಿಯಮಾನುಸಾರ 500 ರೂ. ಶುಲ್ಕ ಪಾವತಿಸಿ ಐದು ವರ್ಷಗಳ ಅವಧಿಗೆ ಪ್ರತ್ಯೇಕ ವೆಂಡರ್ ಲೈಸೆನ್ಸ್ ಪಡೆಯುವುದು ಕಡ್ಡಾಯವಾಗಿದ್ದು, ಎಲ್ಲ ಸ್ಥಳೀಯ ಸಂಸ್ಥೆಗಳು ವ್ಯಾಪಾರಿಗಳಿಗೆ ಅಗತ್ಯ ಮಾಹಿತಿ ನೀಡಿ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು. ಗ್ರಾಮೀಣ ಪ್ರದೇಶಗಳಲ್ಲಿ ತಂಬಾಕು ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ನಿಯಮಾನುಸಾರ ಸಮೀಕ್ಷೆ ಹಾಗೂ ಮೌಲ್ಯಮಾಪನ ವರದಿ ಸಲ್ಲಿಕೆಯ ಬಳಿಕ ಅರ್ಹ ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳೆಂದು ಘೋಷಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ. ಲಿಂಗರಾಜು, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಜಂಬಯ್ಯ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಷಣ್ಮುಖನಾಯ್ಕ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಭಾಸ್ಕರ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ರಾಧಿಕಾರಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ. ಪಿ. ದೊಡ್ಡಮನಿ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿ ಉಪಸ್ಥಿತರಿದ್ದರು.

Please follow and like us: