October 11, 2026

Hampi times

Kannada News Portal from Vijayanagara

ಕೇಂದ್ರ ಬರ ಅಧ್ಯಯನ ತಂಡದ ಭೇಟಿ: ಜಿಲ್ಲೆಯ ನೈಜ ಸ್ಥಿತಿಗತಿ ಮನವರಿಕೆ ಮಾಡಿಕೊಡಿ – ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ

ಹೊಸಪೇಟೆ: ಮುಂಗಾರು ಮಳೆ ಕೊರತೆಯಿಂದ ಜಿಲ್ಲೆಯ ವಿವಿಧ ಭಾಗಗಳಲ್ಲಿ ತೀವ್ರ ಬರದ ಛಾಯೆ ಆವರಿಸಿದ್ದು, ಬರ ಪರಿಸ್ಥಿತಿಯ ಅಧ್ಯಯನಕ್ಕಾಗಿ ಅಕ್ಟೋಬರ್ ೫ರಂದು ಕೇಂದ್ರ ಬರ ಅಧ್ಯಯನ ತಂಡ ಜಿಲ್ಲೆಗೆ ಭೇಟಿ ನೀಡಲಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಕೇಂದ್ರ ತಂಡದ ಭೇಟಿಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೇಂದ್ರ ತಂಡಕ್ಕೆ ಜಿಲ್ಲೆಯ ನೈಜ ಸ್ಥಿತಿಗತಿಯನ್ನು ಯಾವುದೇ ಮುಚ್ಚುಮರೆಯಿಲ್ಲದೆ ಸಮರ್ಪಕವಾಗಿ ಮನವರಿಕೆ ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ವಿವಿಧ ತಾಲ್ಲೂಕುಗಳಿಗೆ ಕೇಂದ್ರ ತಂಡ ಭೇಟಿ ನೀಡಿ ಕೃಷಿ ಹಾನಿ ಹಾಗೂ ಕುಡಿಯುವ ನೀರಿನ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಲಿದೆ. ಈ ಸಂದರ್ಭದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಇಲಾಖೆಯ ಮಾಹಿತಿ ಕೇಳಿದರೂ ವಿಳಂಬವಿಲ್ಲದೆ ಅಧಿಕೃತ ದಾಖಲೆಗಳು ಮತ್ತು ವಾಸ್ತವಾಂಶಗಳನ್ನಾಧರಿಸಿದ ಸಮಗ್ರ ವಿವರ ನೀಡಬೇಕು. ಯಾವುದೇ ಕಾರಣಕ್ಕೂ ಅಪೂರ್ಣ ಅಥವಾ ತಪ್ಪು ಮಾಹಿತಿ ನೀಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮಳೆ ಕೊರತೆ, ಬೆಳೆ ನಷ್ಟ, ಜಲಮೂಲಗಳ ಸ್ಥಿತಿ, ಕುಡಿಯುವ ನೀರಿನ ಲಭ್ಯತೆ, ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಹಾಗೂ ಉದ್ಯೋಗದ ಲಭ್ಯತೆ ಕುರಿತಂತೆ ವಾಸ್ತವ ಚಿತ್ರಣವನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ಬರ ನಿರ್ವಹಣೆಯ ಭಾಗವಾಗಿ ಕೈಗೊಂಡಿರುವ ವಿಜಿ ರಾಮ್ ಜಿ ಕಾಮಗಾರಿಗಳು ಪಾರದರ್ಶಕವಾಗಿ ನಡೆಯಬೇಕು. ಕೂಲಿ ಕಾರ್ಮಿಕರಿಗೆ ನೇರವಾಗಿ ಮತ್ತು ನಿಗದಿತ ಸಮಯಕ್ಕೆ ಹಣ ಪಾವತಿಯಾಗಬೇಕು. ಮಧ್ಯವರ್ತಿಗಳಿಗೆ ಆಸ್ಪದ ನೀಡದೆ ಅಕ್ರಮ ತಡೆಗಟ್ಟಬೇಕು, ತಪ್ಪಿದಲ್ಲಿ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಕೃಷಿ, ತೋಟಗಾರಿಕೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕುಡಿಯುವ ನೀರು, ಪಶುಸಂಗೋಪನೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಕಚೇರಿ ದಾಖಲೆಗಳ ಜೊತೆಗೆ ಕ್ಷೇತ್ರಮಟ್ಟದ ವಾಸ್ತವತೆಯನ್ನು ತಂಡದ ಗಮನಕ್ಕೆ ತರಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಉಪವಿಭಾಗಾಧಿಕಾರಿ ವಿವೇಕಾನಂದ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೆ. ತಿಮ್ಮಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Please follow and like us: