November 27, 2026

Hampi times

Kannada News Portal from Vijayanagara

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅಮಾನತಿಗೆ ಸುಪ್ರೀಂ ಕೋರ್ಟ್ ನಕಾರ: ಕೇಂದ್ರ, ಚುನಾವಣಾ ಆಯೋಗಕ್ಕೆ ನೋಟಿಸ್

ನವದೆಹಲಿ: ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ಅಮಾನತಿಗೆ ಕೋರಿದ್ದ ಮಧ್ಯಂತರ ಆದೇಶ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರಿದ್ದ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿ, ಕೇಂದ್ರ ಸರ್ಕಾರ, ಭಾರತೀಯ ಚುನಾವಣಾ ಆಯೋಗ ಹಾಗೂ ಇತರೆ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

ವಿಶೇಷ ತೀವ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಇತರ ಚುನಾವಣಾ ಆಯುಕ್ತರ ಸಮ್ಮತಿ ಪಡೆಯದೆ ಮುಖ್ಯ ಚುನಾವಣಾ ಆಯುಕ್ತರು ಏಕಪಕ್ಷೀಯವಾಗಿ ಹಲವು ಪ್ರಮುಖ ತೀರ್ಮಾನಗಳನ್ನು ತೆಗೆದುಕೊಂಡಿದ್ದಾರೆ ಎಂದು ಅರ್ಜಿದಾರರು ಕೋರ್ಟ್‌ನಲ್ಲಿ ಆರೋಪಿಸಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ ನ್ಯಾಯಪೀಠ, ಕೇವಲ ಪತ್ರಿಕಾ ವರದಿಗಳ ಆಧಾರದ ಮೇಲೆ ಏಕಪಕ್ಷೀಯವಾಗಿ ಆದೇಶ ಹೊರಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿತು. ಮೊದಲು ಪ್ರತಿವಾದಿಗಳಿಂದ ವಿವರಣೆ ಕೋರಲಾಗುವುದು ಹಾಗೂ ಯಾವುದೇ ಶಾಸನಬದ್ಧ ನಿಯಮಗಳ ಉಲ್ಲಂಘನೆ ನಡೆದಿದೆಯೇ ಎಂಬುದನ್ನು ಪರಿಶೀಲಿಸಲಾಗುವುದು ಎಂದಿದೆ. ದಾಖಲೆಗಳ ಪರಿಶೀಲನೆಯ ವೇಳೆ ಅಗತ್ಯ ಬಹುಮತ ಅಥವಾ ಸರ್ವಾನುಮತವಿಲ್ಲದೆ ನಿರ್ಧಾರಗಳನ್ನು ತೆಗೆದುಕೊಂಡಿರುವುದು ಸಾಬೀತಾದರೆ, ಅಂತಹ ನಿರ್ಧಾರಗಳನ್ನು ಮರುಪರಿಶೀಲಿಸಬಹುದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

Please follow and like us: